ಪಿಡಿಓಗಳ ಕಾರ್ಯವೈಖರಿಯ ಬಗ್ಗೆ ಮೌಲ್ಯಾಂಕನ ಮಾಡಬೇಕು. ಅವರು ಏನು ಕೆಲಸ ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿಯಬೇಕು ಎಂದು ಸಭಾಧ್ಯಕ್ಷರು ತಿಳಿಸಿದರು.
ರಾಜ್ಯದ ಗ್ರಾಮ ಪಂಚಾಯತ್‍ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯನ್ನು ಗ್ರೂಪ್ ಬಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸಾವನೆಗೆ ಸಲ್ಲಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ವಿಧಾನಸಭೆಯ ಪ್ರಶ್ನೋತ್ತರದಲ್ಲಿ ತಿಳಿಸಿದರು.
ಶಾಸಕ ಗೂಳಿಹಟ್ಟಿ ಡಿ. ಶೇಖರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ಒಪ್ಪಿದರೆ ಮೊದಲ ಆದ್ಯತೆಯಲ್ಲೇ ಗ್ರೇಡ್-2 ಮೇಲ್ದರ್ಜೆಗೇರಿಸುವ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಸ್ತುತ ರಾಜ್ಯದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೃಂದದ ನೇರ ನೇಮಕಾತಿ ಕೋಟಾದಲ್ಲಿ 3717 ನೌಕರರು ಮತ್ತು ಮುಂಬಡ್ತಿ ಕೋಟಾದಲ್ಲಿ 1563 ನೌಕರರು ಸೇರಿದಂತೆ ಒಟ್ಟು 5280 ನೌಕರರು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ ಎಂದು ಸಚಿವರು ತಿಳಿಸಿದರು.