ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗಳ ತಾತ್ಕಾಲಿಕ ನೇಮಕಾತಿ : ಕಾನೂನು ಹೋರಾಟಕ್ಕಿಳಿಯುತ್ತೇವೆ : ರಾಜ್ಯ ರೈತ ಸಂಘ

varthajala
0

ಬೆಂಗಳೂರು, ಜ.30: ಪೊಲೀಸ್ ಇಲಾಖೆಯು ಇತ್ತೀಚೆಗೆ (ಜ.19) ಬಿಡುಗಡೆ ಮಾಡಿರುವ 542  ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪುನರ್ ಪರಿಶೀಲಿಸಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಆಗಿರುವ ವಂಚನೆಯನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಕಾನೂನಾತ್ಮಕವಾಗಿ ಹೋರಾಟ ಮಾಡಲಾಗುವುದು. ಜತೆಗೆ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮುಂದಾಗುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಸರಕಾರಕ್ಕೆ ಎಚ್ಚರಿಕೆ ನೀಡಿದೆ. 

ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಕಾಯಿದೆ 371ಜೆ ಅಡಿಯಲ್ಲಿ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕ ಭಾಗದವರಿಗೆ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 371ಜೆ ಕಾಯಿದೆಯನ್ನು ಜಾರಿಗೆ ತರಲಾಗಿತ್ತು. ಆದರೆ ರಾಜ್ಯ ಸರಕಾರ ಮಾತ್ರ ಎಲ್ಲಾ ಕಾನೂನು, ನಿಯಮಗಳನ್ನು ಗಾಳಿಗೆ ತೂರಿ ಕಾಯಿದೆಯ ಉದ್ದೇಶಕ್ಕೆ ಧಕ್ಕೆ ತಂದಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಎ. ಪಾಟೀಲ ಮದ್ದರಕಿ ಬೇಸರ ವ್ಯಕ್ತಪಡಿಸಿದ್ದಾರೆ. 

ಮೆರಿಟ್ ಪ್ರಕಾರ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದವರನ್ನು ರಾಜ್ಯವ್ಯಾಪಿ ನೇಮಕಾತಿಯಲ್ಲಿ ಪರಿಗಣಿಸಿ ನಂತರ ಉಳಿದ ಅಭ್ಯರ್ಥಿಗಳನ್ನು 371ಜೆ ಕಾಯಿದೆಯ ಮೀಸಲಾತಿ ಅಡಿ ನೇಮಕ ಮಾಡಿಕೊಳ್ಳಬೇಕೆಂದು ಕಾನೂನಿನಲ್ಲಿ ಹೇಳಲಾಗಿದೆ‌. ಹೀಗಿದ್ದರೂ ಕೂಡ ಅತಿ ಹೆಚ್ಚು ಅಂಕಗಳನ್ನು ಪಡೆದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೀಮಿತಗೊಳಿಸಿ ಈ ಭಾಗದ ಉಳಿದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಮುಖ್ಯಮಂತ್ರಿಗಳು ಈ ಅನ್ಯಾಯವನ್ನು ತಕ್ಷಣ ಸರಿಪಡಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟದ ಜತೆಗೆ, ಸರಕಾರದ ಮಲತಾಯಿ ಧೋರಣೆ ವಿರುದ್ಧ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಲಕ್ಷ್ಮೀಕಾಂತ ಎ. ಪಾಟೀಲ ಮದ್ದರಕಿ ಮನವಿ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

Tags

Post a Comment

0Comments

Post a Comment (0)