ಬೆಂಗಳೂರು, ಫೆಬ್ರವರಿ 19, (ಕರ್ನಾಟಕ ವಾರ್ತೆ) : ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ, ರಾಜಿನಾಮೆ ಹಾಗೂ ಇನ್ನಿತರೆ ಕಾರಣಗಳಿಂದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಮರಿತಿಬ್ಬೇಗೌಡ ಹಾಗೂ ಎಸ್. ವ್ಹಿ. ಸಂಕನೂರ ಅವರುಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಹಾಗೂ ಇನ್ನಿತರೆ ಕಾರಣಗಳಿಂದ ದಿನಾಂಕ: 31-12-2015ರ ವರೆಗೆ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ.
ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜಿನಾಮೆ, ಮರಣ ಹಾಗೂ ಇನ್ನಿತರೆ ಕಾರಣಗಳಿಂದಾಗಿ ದಿನಾಂಕ: 01-01-2016 ರಿಂದ 31-12-2020ರ ವರೆಗೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯ ಸಹಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯಿಂದ ಕೂಡಲೇ ಸಹಮತಿ ಪಡೆದು ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆದಷ್ಟು ಶೀಘ್ರವಾಗಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಹುದ್ದೆಗಳನ್ನು ಭರ್ತಿ ಮಾಡಲು ಉಚ್ಛನ್ಯಾಯಾಲಯದ ಅನುಮತಿ ಇದ್ದರೂ ಸಹ ಸರ್ಕಾರದ ಆದೇಶಗಳನ್ವಯ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲೂ ಸಹ ಆದಷ್ಟೂ ಬೇಗ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963ರ ವ್ಯಾಪ್ತಿಗೆ ಒಳಪಡುವುದಿಲ್ಲ. ಕರ್ನಾಟಕ ಶಿಕ್ಷಣ ಸಂಸ್ಥೆಗಳು ಖಾಸಗಿ ಅನುದಾನಿತ ಪ್ರಥಮಿಕ ಮತ್ತು ಪ್ರೌಢ ಶಿಕ್ಷಣ ಸಂಸ್ಥೆಗಳ ನೌಕರರ ನೇಮಕಾತಿ ಮತ್ತು ಸೇವಾ ಷರತ್ತು ಹಾಗೂ ನಿಬಂಧನೆಗಳು) ನಿಯಮಗಳು 1999ರ ಅನುಬಂಧ- 2 (3)ರನ್ವಯ ವೈದ್ಯಕೀಯ ವೆಚ್ಚ ಮರುಪಾವತಿಗೆ ಅರ್ಹರಾಗಿರುವುದಿಲ್ಲ. ಆದ್ದರಿಂದ ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳ ಆರೋಗ್ಯ ಸಂಜೀವಿನಿ ಯೋಜನೆಗೆ ನಗದು ರಹಿತ ಚಿಕಿತ್ಸಾ ವ್ಯಾಪ್ತಿಗೆ ಬರುವುದಿಲ್ಲ. ಅದಾಗ್ಯೂ ಈ ಸಮಬಂಧ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮವಹಿಸಲಾಗುವುದು ಎಮದು ಸಚಿವರು ತಿಳಿಸಿದರು.