ಬೆಂಗಳೂರು, ಏಪ್ರಿಲ್ 19 (ಕರ್ನಾಟಕ ವಾರ್ತೆ):
ಮತದಾನ ಅತ್ಯಂತ ಪವಿತ್ರ ಕಾರ್ಯವಾಗಿದ್ದು, ಸದೃಢ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ಮತದಾರರ ಸಹಭಾಗಿತ್ವ ಅತ್ಯಗತ್ಯವಾಗಿದ್ದು ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಎಸ್.ವಿ. ಸುರೇಶ ತಿಳಿಸಿದರು.
ಅವರು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಜಿ.ಕೆ.ವಿ.ಕೆ. ಆವರಣದಲ್ಲಿ ಹಮ್ಮಿಕೊಂಡಿದ್ದ “ಮತದಾನ ಕುರಿತ ಜಾಗೃತಿ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆಮಾಡುವುದರಿಂದ ದೇಶದ ದಿಕ್ಕನ್ನು ಪ್ರಗತಿಪರ ಹಾದಿಯಲ್ಲಿ ಅಭಿವೃದ್ಧಿಯತ್ತ ಸಾಗಿಸಬಹುದು. ಮತದಾರರು ಜಾತಿ, ಹಣ ಮುಂತಾದ ಆಮಿಷಗಳಿಗೆ ಒಳಗಾಗದೆ ಸೂಕ್ತ ಅಭ್ಯರ್ಥಿಗೆ ಮತ ನೀಡಬೇಕು. ಯುವಕರು ದೇಶದ ಬೆನ್ನೆಲುಬಾಗಿರುವುದರಿಂದ ತಪ್ಪದೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಬೀದಿನಾಟಕ, ಡೊಳ್ಳು ಕುಣಿತ, ನೃತ್ಯ ಮತ್ತು ಹಾಡುಗಳ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಯಲಹಂಕ ಬಿ.ಬಿ.ಎಂ.ಪಿ ಉಪ ಆಯುಕ್ತರಾದ ಶ್ರೀಮತಿ ಬಿ.ಕೆ. ಮಮತ, ಕೃಷಿ ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.