ಬೆಂಗಳೂರು (ಕರ್ನಾಟಕ ವಾರ್ತೆ): ಸಾಮಾಜಿಕ ಜಾಲತಾಣಗಳಲ್ಲಿ ಬಸ್ ನಿಲ್ದಾಣಗಳು ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಇರುವ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿಗಳು ಭಿತ್ತರವಾಗುತ್ತಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಛೇರಿಯ ಸೂಚನೆಯಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆಯ ಅಂಶಗಳು ಸೇರಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡುವ ಬಗ್ಗೆ ಜೂನ್-2024ರ ಮಾಹೆಯಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ.
ಈ ಅಭಿಯಾನದ ಸಂದರ್ಭದಲ್ಲಿ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿರುತ್ತದೆ. ಪರಿಶೀಲನೆ ಸಂದರ್ಭದಲ್ಲಿ 179 ವ್ಯಾಪಾರ ಮಳಿಗೆಗಳು ನೊಂದಣಿ/ಪರವಾನಿಗೆ ಹೊಂದಿಲ್ಲದಿರುವುದರಿಂದ ಮತ್ತು 120 ಆಹಾರ ಮಳಿಗೆಗಳಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿರುವುದರಿಂದ ನೋಟಿಸ್‍ಗಳನ್ನು ಜಾರಿಗೊಳಿಸಲಾಗಿದೆ ಮತ್ತು 19 ಆಹಾರ ಮಳಿಗೆಗಳಿಗೆ ರೂ.48,000/-ಗಳ ದಂಡವನ್ನು ವಿಧಿಸಲಾಗಿದೆ. ಪರಿಶೀಲನಾ ಭೇಟಿಯ ಸಮಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011ಗಳನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಸಂಬಂಧಿಸಿದ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Post a Comment
0Comments