ಬೆಂಗಳೂರು (ಕರ್ನಾಟಕ ವಾರ್ತೆ) : ರಾಜ್ಯದಲ್ಲಿ ಒಟ್ಟು 69,919 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ 30 ವರ್ಷ ಮೇಲ್ಪಟ್ಟ ಅಂಗನವಾಡಿ ಕಟ್ಟಡಗಳ ವಿವರಗಳನ್ನು ಪಡೆಯಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ ಆಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಥಿಲಗೊಂಡ ಅಂಗನವಾಡಿ ಕಟ್ಟಡಗಳ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಈವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂದೆಯು ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.
ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಹಾಗೂ ಸದೃಢರಾಗಲು ಮೊಟ್ಟೆ ಹಾಗೂ ಗುಣಮಟ್ಟz ಆಹಾರ ಒದಗಿಸಲಾಗುತ್ತಿದೆ. ನಾನು ಸಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಏನಾದರೂ ಲೋಪ - ದೋಷವಿದ್ದಲ್ಲಿ ಅದರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.