ಬೆಂಗಳೂರು, ಮಾರ್ಚ್ 14 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನ ಆಗಿರುವುದಿಲ್ಲ ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ನಿಲುವಳಿ ಸೂಚನೆಯಡಿ ಡಾ:ಸಿ.ಎನ್ ಅಶ್ವತ್ಥ್ ನಾರಾಯಣ ಅವರು ಪ್ರಸ್ತಾವ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ತೀರ್ಮಾನವೇ ಆಗಿಲ್ಲ. ಉಪ ಸಮಿತಿಯು ವಿಶ್ವವಿದ್ಯಾನಿಲಯಗಳನ್ನು ಮುಂದುವರೆಸಬೇಕೆ, ಬೇಡವೇ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವರದಿ ನೀಡಬೇಕಾಗಿದೆ. ಸಮಿತಿಯು ನೀಡಿದ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿದ ನಂತರ ಈ ವಿಷಯದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ತಿಳಿಸಿದರು.