ಮಕ್ಕಳ ಹಕ್ಕುಗಳ ರಕ್ಷಣೆ ಇಂದು ಆದ್ಯತೆಯ ವಿಷಯವಾಗಿದ್ದು ವಿವಿಧ ಇಲಾಖೆಗಳ ಸಮನ್ವಯದಿಂದ ಅದು ಸಾಧ್ಯವಾಗುತ್ತದೆ. ಅದರಲ್ಲೂ ಪೊಲೀಸ್ ಇಲಾಖೆಯು ಈ ನಿಟ್ಟಿನಲ್ಲಿ ಮಹತ್ವದ ಪಾತ್ರವಹಿಸಲಿದೆ. ಮಕ್ಕಳ ನ್ಯಾಯ ಕಾಯ್ದೆಯ ಸೆಕ್ಷನ್ 107 ರಡಿಯಲ್ಲಿ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕಗಳ ರಚನೆ ಕಡ್ಡಾಯವಾಗಿದೆ. ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಾಯ್ದೆಗಳ ಬಗ್ಗೆ ತರಬೇತಿ ಪಡೆದ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಇರಬೇಕು. ಮಕ್ಕಳ ಪ್ರಕರಣಗಳನ್ನು ಸಂವೇದನಾಶೀಲತೆಯಿಂದ ನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಅವರು ತುಮಕೂರು ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆದ ತುಮಕೂರು ಜಿಲ್ಲೆಯ ಮಕ್ಕಳ ವಿಶೇಷ ಪೊಲೀಸ್ ಘಟಕಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸದರಿ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಂದ ಮಕ್ಕಳ ವಿಶೇಷ ಪೊಲೀಸ್ ಘಟಕಗಳ ರಚನೆ, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ನಡೆದ ಪೋಕ್ಸೋ ಪ್ರಕರಣಗಳು, ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳು, ಬಾಲ ಮತ್ತು ಕಿಶೋರ ಕಾರ್ಮಿಕ ಪದ್ದತಿ ಪ್ರಕರಣಗಳು, ಮಕ್ಕಳ ನಾಪತ್ತೆ (ಮಕ್ಕಳ ಅಪಹರಣ) ಪ್ರಕರಣಗಳು, ಮಕ್ಕಳ ಕಳ್ಳ ಸಾಗಣೆಗೆ ಸಂಬಂಧಿಸಿದ ಪ್ರಕರಣಗಳು, ಮಕ್ಕಳ ನ್ಯಾಯ ಕಾಯ್ದೆಯ ಸೆಕ್ಷನ್ 75,77, 78, 79ರಡಿಯಲ್ಲಿ ದಾಖಲಾದ ಪ್ರಕರಣಗಳ ಕುರಿತು ಮಾಹಿತಿ ಪಡೆದರು.
ರಾಜ್ಯದಾದ್ಯಂತ ಮಕ್ಕಳ ಮೇಲಿನ ಲೈಂಗಿಕ ಹಿಂಸೆಯ ಪ್ರಕರಣಗಳು ಹೆಚ್ಚುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಎಲ್ಲಾ ಠಾಣೆಗಳಲ್ಲೂ ಪ್ರತೀ ಗುರುವಾರ ‘ತೆರೆದ ಮನೆ’ ಕಾರ್ಯಕ್ರಮವನ್ನು ವ್ಯಾಪಕವಾಗಿ ನಡೆಸಬೇಕು, ಅದರಲ್ಲೂ ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಆ ಮೂಲಕ ಮಕ್ಕಳ ಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಬೇಕೆಂದರು.
ರಾತ್ರಿವೇಳೆಗಳಲ್ಲಿ ಶಾಲಾ ಕಾಲೇಜುಗಳ ಆವರಣಗಳ ದುರ್ಬಳಕೆಯ ಬಗ್ಗೆ ಬೀಟ್ ಪೊಲೀಸ್ ಅಧಿಕಾರಿಗಳು ವಿಶೇಷ ನಿಗಾವಹಿಸುವುದು, ಗ್ರಾಮ ಪಂಚಾಯ್ತಿಗಳಲ್ಲಿನ ಮಹಿಳೆ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯ ತ್ರೈಮಾಸಿಕ ಸಭೆಗಳಲ್ಲಿ ಭಾಗವಹಿಸಿ ಪಂಚಾಯ್ತಿ ಮಟ್ಟದಲ್ಲಿನ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಮನ್ವಯ ಸಾಧಿಸುವುದು ಹಾಗೂ ಮಕ್ಕಳ ಹಕ್ಕುಗಳ ಗ್ರಾಮಸಭೆಗಳಲ್ಲಿ ಬರುವ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕೆಂದು ಸೂಚಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಅಶೋಕ್ ಕೆ.ವಿ ರವರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಮಕ್ಕಳ ವಿಶೇಷ ಪೊಲೀಸ್ ಘಟಕಗಳ ರಚನೆ ಮಾಡಲಾಗಿದ್ದು ಮಕ್ಕಳ ರಕ್ಷಣೆಗೆ ವಿಶೇಷ ಆಧ್ಯತೆ ವಹಿಸಲಾಗಿದೆ, ಅಲ್ಲದೇ ಮಕ್ಕಳ ವಿಶೇಷ ಪೊಲೀಸ್ ಘಟಕದ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಮುಂದುವರೆದು ಮಕ್ಕಳ ರಕ್ಷಣೆಯ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಪಾರಸ್ಸುಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದೆಂದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳಾದ ಶ್ರೀಮತಿ ನೂರುನ್ನಿಸಾ ರವರು, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀ ಅಬ್ದುಲ್ ಖಾದರ್ ರವರು, ಡಿ.ವೈ.ಎಸ್.ಪಿ ಶ್ರೀ ಚಂದ್ರಶೇಖರ್ ರವರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀ ದಿನೇಶ್ ರವರು, ರಕ್ಷಣಾಧಿಕಾರಿ ಶ್ರೀ ಶಿವಣ್ಣ ಸೇರಿದಂತೆ ತುಮಕೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.