ಬೆಳಗಾವಿ: ಸಿಎಂ ಸಿದ್ದರಾಮಯ್ಯ ಕರ್ನಾಟಕವನ್ನ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನವೆಂಬರ್ ನಲ್ಲಿ ಟೈಂ ಬಾಂಬ್ ಫಿಕ್ಸ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಬುಧವಾರ ಹೇಳಿದ್ದಾರೆ.
ಕುಂದಾನಗರಿಯಲ್ಲಿ ನಡೆದ ಬಿಜೆಪಿಯ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದು ಬಿಜೆಪಿಯ ಆಕ್ರೋಶದ ಯಾತ್ರೆ ಅಲ್ಲ. ಜನರ ಆಕ್ರೋಶದ ಯಾತ್ರೆ. ಬೆಲೆ ಏರಿಕೆಯಿಂದ ಜನರು ಸಂಕಷ್ಟ ಪಡುತ್ತಿದ್ದಾರೆ. ಬಿಜೆಪಿ ಜನರಿಗಾಗಿ ಹೋರಾಟ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಕರ್ನಾಟಕವನ್ನು ಪಾಕಿಸ್ತಾನವನ್ನಾಗಿ ಬದಲಾಯಿಸುವ ಮಿಷನ್ ನಲ್ಲಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಗೆ ನವೆಂಬರ್‌ಗೆ ಟೈಂ ಬಾಂಬ್ ಫಿಕ್ಸ್ ಮಾಡಲಾಗಿದೆ. ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬುದು ಅವರಿಗೆ ಗೊತ್ತಿದೆ. ಅದಕ್ಕಾಗಿಯೇ ಹೀಗೆಲ್ಲಾ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಡವರ ಮೇಲೆ ತೆರಿಗೆ ಹೇರುತ್ತಿದ್ದಾರೆ. ಕೇಂದ್ರ ಕಾಂಗ್ರೆಸ್‌ಗೆ ಕರ್ನಾಟಕ ಮತ್ತು ತೆಲಂಗಾಣ ಎಟಿಎಂಗಳಾಗಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರರು ಸ್ಥಾಪಿಸಿದ ಪತ್ರಿಕಾ ಸಂಸ್ಥೆಯಲ್ಲಿ ರೂ. 50 ಲಕ್ಷ ಬಂಡವಾಳ ಹೂಡಿ ರೂ. 7,500 ಲೂಟಿ ಹೊಡೆದಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ಅವರೇ ಇಂತಹ ಭ್ರಷ್ಟಾಚಾರದಲ್ಲಿ ತೊಡಗಿರುವಾಗ ಬಿಜೆಪಿ ವಿರುದ್ಧ ಆರೋಪ ಮಾಡಲು ಅವರಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು.